ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. 

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಜ್ವಲ್‌ ರೇವಣ್ಣ ಅವರನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಬಾಡಿ ವಾರೆಂಟ್‌ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಅವರನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲು ಪೊಲೀಸರು ನ್ಯಾಯಾಲಯದಲ್ಲಿ ಮನವಿ ಮಾಡಿದರು.


ಈ ಪ್ರಕರಣದಲ್ಲಿ ಪ್ರತಾಪ್‌ ಎ1 ಆರೋಪಿಯಾಗಿದ್ದು, ಪ್ರಜ್ವಲ್‌ ರೇವಣ್ಣ ಎ2 ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಪ್ರಜ್ವಲ್‌ ರೇವಣ್ಣ ಹಾಗೂ ಪ್ರತಾಪ್‌ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಪೊಲೀಸರು ಕೋರಿದರು.


ಪೊಲೀಸರ ಮನವಿಯನ್ನು ಪರಿಗಣಿಸಿದ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ಹಾಗೂ ಪ್ರತಾಪ್‌ ಅವರನ್ನು ಎರಡು ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿದೆ.

ನ್ಯಾಯಾಧೀಶರಾದ ಸಂದೀಪ್‌ ಪಾಟೀಲ್‌ ಅವರು ಈ ಆದೇಶ ಹೊರಡಿಸಿದ್ದು, ಆದೇಶದ ಅನ್ವಯ ಇಂದಿನಿಂದಲೇ ಪೊಲೀಸರು ಪ್ರಜ್ವಲ್‌ ರೇವಣ್ಣ ಅವರನ್ನು ವಿಚಾರಣೆ ನಡೆಸಲಿದ್ದಾರೆ.


ಜೈಲಿನೊಳಗೆ ಮೊಬೈಲ್ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಯಾವ ರೀತಿಯ ತನಿಖೆ ನಡೆಸಲಿದ್ದಾರೆ ಹಾಗೂ ವಿಚಾರಣೆಯಲ್ಲಿ ಏನೆಲ್ಲ ಮಾಹಿತಿ ಹೊರಬರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.