ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸ್ಲೀಪರ್ ಬಸ್ಗೆ ಬೆಂಕಿ ಹೊತ್ತಿಕೊಂಡು 9 ಮಂದಿ ಸಜೀವ ದಹನಗೊಂಡಿದ್ದಾರೆ.
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸ್ಲೀಪರ್ ಬಸ್ಗೆ ಬೆಂಕಿ ಹೊತ್ತಿಕೊಂಡು 9 ಮಂದಿ ಸಜೀವ ದಹನಗೊಂಡ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.
ಘಟನೆಯಲ್ಲಿ ಜೀವಹಾನಿಯಾಗಿರುವುದಕ್ಕೆ ಪ್ರಧಾನಿ ಕಚೇರಿ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ.
ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ಗೆ ಬೆಂಕಿ ಆವರಿಸಿಕೊಂಡಿದೆ. ಬಸ್ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಕೆಲವರು ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್ನಿಂದಲೇ ಜಿಗಿದಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ನ ಎಸಿ ವ್ಯವಸ್ಥೆಯಲ್ಲಿ ಉಂಟಾದ ಸ್ಪಾರ್ಕ್ ಅಥವಾ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕ ಹಾಗೂ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.