ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲೇ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ. ವೈದ್ಯರು ಸುಮಾರು ಎರಡು ಗಂಟೆಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.


ಅಮಿತ್ ಶಾ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ಭುವನೇಶ ಪಾಟೀಲ್ ಸೇರಿದಂತೆ ಅಧಿಕಾರಿಗಳು ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಐಜಿಪಿ ಲಾಬುರಾಮ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.


ಶುಕ್ರವಾರ ತಡರಾತ್ರಿ ವಿಶೇಷ ವಿಮಾನದ ಮೂಲಕ ಅಮಿತ್ ಶಾ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಶನಿವಾರ ಹುಬ್ಬಳ್ಳಿಯ ಗಬ್ಬೂರು ಭಾಗದಲ್ಲಿ ನಿರ್ಮಿಸಲಾಗಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ, ಕೆಎಲ್‌ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬೇಕಿತ್ತು.


ನೂತನ ಕೆಎಲ್‌ಇ ಆಸ್ಪತ್ರೆಯಲ್ಲಿ 1,200 ಹಾಸಿಗೆಗಳ ವ್ಯವಸ್ಥೆ ಇದೆ ಎಂದು ಕಾರ್ಯಕ್ರಮದ ಮಾಹಿತಿಯಲ್ಲಿ ತಿಳಿಸಲಾಗಿದೆ. ಅಮಿತ್ ಶಾ ಅವರಿಗೆ ವಿಶ್ರಾಂತಿ ಸೂಚಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಕಾರ್ಯಕ್ರಮ ಮುಂದುವರಿಯುತ್ತಿದೆ ಎಂದು ವರದಿಯಾಗಿದೆ.

ಅಮಿತ್ ಶಾ ಅವರ ಮುಂದಿನ ಕಾರ್ಯಕ್ರಮ ಹಾಗೂ ದೆಹಲಿಗೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.