ರಾಯಚೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆಗೆ ಬಿಜೆಪಿ ಕಾರ್ಯಕರ್ತರ ದಂಡೇ ಹರಿದುಬರುತ್ತಿದೆ.

ಎರಡನೇ ದಿನವಾದ ಇಂದು ಸಂತೆಕೆಲ್ಲೂರಿನ ಘನಮಠೇಶ್ವರ ಮಠದಿಂದ ಗುಡದೂರುವರೆಗೆ ಸುಮಾರು 21 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆಯಲ್ಲಿ ಬಿಜೆಪಿ ಪಕ್ಷದ ಹಲವು ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಮಸ್ಕಿ, ಮಾನ್ವಿ, ಹುನಗುಂದ, ಕುಷ್ಟಗಿ, ಲಿಂಗಸುಗೂರು ಹಾಗೂ ಮುದ್ದೇಬಿಹಾಳ ಕ್ಷೇತ್ರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾದಯಾತ್ರೆಗೆ ಆಗಮಿಸಲಿದ್ದಾರೆ.


ಮುದಬಾಳ ಕ್ರಾಸ್‌ನಲ್ಲಿ ದಲಿತ ಮುಖಂಡರೊಂದಿಗೆ ಸಂವಾದ

ಸಂತೆಕೆಲ್ಲೂರಿನಿಂದ ಮುದಬಾಳ ಕ್ರಾಸ್‌ವರೆಗೆ ಪಾದಯಾತ್ರೆ ನಡೆಯಲಿದ್ದು, ಬಳಿಕ ಮಧ್ಯಾಹ್ನದ ಊಟದ ವಿರಾಮ ನೀಡಲಾಗುತ್ತದೆ. ಇದೇ ವೇಳೆ ಮಧ್ಯಾಹ್ನ 2 ಗಂಟೆಗೆ ಮುದಬಾಳ ಕ್ರಾಸ್‌ನಲ್ಲಿ ಬಿ.ವೈ. ವಿಜಯೇಂದ್ರ ಅವರು ದಲಿತ ಮುಖಂಡರೊಂದಿಗೆ ಸಂವಾದ ನಡೆಸಲಿದ್ದಾರೆ.

ಮಧ್ಯಾಹ್ನದ ಬಳಿಕ ಮುದಬಾಳ ಕ್ರಾಸ್‌ನಿಂದ ಗುಡದೂರುವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಇಂದು 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯನ್ನು ಬಿಜೆಪಿ ನಾಯಕರು ಹೊಂದಿದ್ದಾರೆ.


ಗುಡದೂರಿನಲ್ಲಿ 2ನೇ ದಿನದ ಪಾದಯಾತ್ರೆ ಅಂತ್ಯ

ಸಂಜೆ ಮಸ್ಕಿ ಕ್ಷೇತ್ರದ ಗುಡದೂರಿನಲ್ಲಿ ಎರಡನೇ ದಿನದ ಪಾದಯಾತ್ರೆ ಅಂತ್ಯಗೊಳ್ಳಲಿದೆ. ಪಾದಯಾತ್ರೆಯ ಹಿನ್ನೆಲೆಯಲ್ಲಿ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.


ಹಲವು ಬಿಜೆಪಿ ನಾಯಕರು ಭಾಗಿ

ಎರಡನೇ ದಿನದ ಪಾದಯಾತ್ರೆಯಲ್ಲಿ ಬಿಜೆಪಿ ನಾಯಕರಾದ ಸಿ.ಟಿ. ರವಿ, ಶ್ರೀರಾಮುಲು, ಜನಾರ್ದನ ರೆಡ್ಡಿ, ಎನ್. ರವಿಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಾದಯಾತ್ರೆ ಪೂರ್ಣಗೊಂಡ ಬಳಿಕ ಬಿಜೆಪಿ ನಾಯಕರು ಮಸ್ಕಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಬಳ್ಳಾರಿ ಚಲೋ ಪಾದಯಾತ್ರೆಯ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಎರಡನೇ ದಿನದ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ನಿರೀಕ್ಷೆ ಮೂಡಿದೆ.