ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ಮಾಜಿ ಯೋಧ ರುದ್ರಪ್ಪ ಕುಂದರಗಿ ಹಾಗೂ ಪುತ್ರಿ ಶಶಿಕಲಾ ಕುಂದರಗಿ ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದೆ.
ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರುದ್ರಪ್ಪ ಹಾಗೂ ಅವರ ಸಹೋದರರ ನಡುವೆ 38 ಗುಂಟೆ ಆಸ್ತಿಗೆ ಸಂಬಂಧಿಸಿದಂತೆ ವಿವಾದವಿತ್ತು ಎನ್ನಲಾಗಿದೆ. ಆಸ್ತಿಯನ್ನು ಮೂವರು ಸಹೋದರರಿಗೆ ಹಂಚಿಕೆ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು ಎನ್ನಲಾಗಿದ್ದು, ಇದೇ ವಿಚಾರವಾಗಿ ಕುಟುಂಬದಲ್ಲಿ ವೈಮನಸ್ಸು ಇತ್ತು ಎಂದು ತಿಳಿದುಬಂದಿದೆ.
ಆಸ್ತಿ ಪಾಲುದಾರಿಕೆಗೆ ಸಂಬಂಧಿಸಿದ ದಾಖಲೆ ಮಾಡಿಸಲು ರುದ್ರಪ್ಪ ಗ್ರಾಮ ಪಂಚಾಯಿತಿಗೆ ಬಂದಿದ್ದರು. ಅವರು ಪಂಚಾಯಿತಿಗೆ ಬಂದಿರುವ ವಿಚಾರ ತಿಳಿದ ಬಳಿಕ ಅವರ ಸಹೋದರರಾದ ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಸಂಗಪ್ಪ ಅವರ ಪುತ್ರ ಮಡಿವಾಳಪ್ಪ ಕುಂದರಗಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಗ್ರಾಮ ಪಂಚಾಯಿತಿ ಆವರಣದಲ್ಲೇ ರುದ್ರಪ್ಪ ಅವರ ಮೇಲೆ ಕೊಡಲಿ, ಕುಡಗೋಲು ಸೇರಿದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಈ ವೇಳೆ ತಂದೆಯನ್ನು ರಕ್ಷಿಸಲು ಮುಂದಾದ ಪುತ್ರಿ ಶಶಿಕಲಾ ಅವರ ಮೇಲೂ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಇಬ್ಬರೂ ಮೃತಪಟ್ಟಿದ್ದಾರೆ.
ರುದ್ರಪ್ಪ ಅವರ ಹೆಸರಿನಲ್ಲಿ ಆಸ್ತಿ ಇರುವ ವಿಚಾರ ಹಾಗೂ ಜಮೀನು ಪಾಲಿನ ವಿಚಾರವೇ ಕುಟುಂಬದ ಕಲಹಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಧಾರವಾಡದಿಂದ ಬಾಡಿಗೆ ಕಾರಿನಲ್ಲಿ ರುದ್ರಪ್ಪ ಗ್ರಾಮಕ್ಕೆ ಬಂದಿರುವ ಮಾಹಿತಿ ತಿಳಿದ ಬಳಿಕ ದಾಳಿ ನಡೆದಿದೆ ಎನ್ನಲಾಗಿದೆ.
ಘಟನೆಯ ಕುರಿತು ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದೆ.