ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ (87) ಅವರು ಬೈಲಹೊಂಗಲದ ನಿವಾಸದಲ್ಲಿ ನಿಧನರಾಗಿದ್ದಾರೆ.
ಉತ್ತರ ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ಮಾಜಿ ಸಂಸದ ಶಿವಾನಂದ ಕೌಜಲಗಿ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೈಲಹೊಂಗಲದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ತಂದೆಯ ನಿಧನದ ವಿಚಾರವನ್ನು ಅವರ ಪುತ್ರ ಹಾಗೂ ಬೈಲಹೊಂಗಲ ಕ್ಷೇತ್ರದ ಶಾಸಕ ಮಹಾಂತೇಶ ಕೌಜಲಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಮೂಲಕ ಹಂಚಿಕೊಂಡಿದ್ದಾರೆ.
ಶಿವಾನಂದ ಕೌಜಲಗಿ ಅವರು ಬೈಲಹೊಂಗಲ ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
1996ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಅವರು, ರಾಜಕೀಯ ಕ್ಷೇತ್ರದ ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿದ್ದರು. ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿ (KLE Society) ಅಧ್ಯಕ್ಷರಾಗಿ ಸಂಸ್ಥೆಯ ಬೆಳವಣಿಗೆಗೆ ಕೊಡುಗೆ ನೀಡಿದ್ದರು.
ಮೃತರ ಅಂತಿಮ ಸಂಸ್ಕಾರ ನಾಳೆ ಬೆಳಗ್ಗೆ 11 ಗಂಟೆಗೆ ಬೈಲಹೊಂಗಲ ಪಟ್ಟಣದ ಅನಿಗೋಳ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಪುತ್ರ ಮಹಾಂತೇಶ ಕೌಜಲಗಿ ತಿಳಿಸಿದ್ದಾರೆ.
ಶಿವಾನಂದ ಕೌಜಲಗಿ ಅವರ ನಿಧನಕ್ಕೆ ರಾಜಕೀಯ ಹಾಗೂ ಸಾಮಾಜಿಕ ವಲಯದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.