ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಳಗಾವಿ: ಪತ್ನಿ ವಿಚ್ಛೇದನ ಕೇಳಿದ್ದಕ್ಕೆ ಪತಿ ಕೊಲೆ ಮಾಡಿರುವ ಆರೋಪ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅಮಟೂರ ಗ್ರಾಮದಲ್ಲಿ ಕೇಳಿಬಂದಿದೆ. ಗೊಲ್ಲರ ಓಣಿ ನಿವಾಸಿ ಲಕ್ಷ್ಮಿ ಮಾಡಮಗೇರಿ (31) ಮೃತಪಟ್ಟ ಮಹಿಳೆ.


ಲಕ್ಷ್ಮಿ ಹಾಗೂ ರಾಜು ಮಾಡಮಗೇರಿ ಐದು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ಇಬ್ಬರ ನಡುವೆ ಮನಸ್ತಾಪವಿತ್ತು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ಲಕ್ಷ್ಮಿ ವಿಚ್ಛೇದನ ನೀಡುವಂತೆ ಪತಿಗೆ ಕೇಳಿದ್ದಳು ಎನ್ನಲಾಗಿದೆ.


ಪೊಲೀಸರ ಪ್ರಕಾರ, ಪತ್ನಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಆಕೆಯನ್ನು ಮನೆಗೆ ಡ್ರಾಪ್ ಮಾಡುವುದಾಗಿ ಹೇಳಿ ರಾಜು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಘಟನೆ ಬಳಿಕ ರಾಜು ಮಾಡಮಗೇರಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಬೈಲಹೊಂಗಲ ಠಾಣೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣದ ನಿಖರ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.