ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ರಾಯಚೂರು: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಯಚೂರು ಜಿಲ್ಲೆಯ ಸಿಂಧನೂರು ನಗರದಿಂದ ಕೊಪ್ಪಳ ಜಿಲ್ಲೆಯ ಕಾರಟಗಿ ವರೆಗೆ ಸುಮಾರು 26 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಸುನಿಲ್ ಕುಮಾರ್, ಮಹೇಶ್ ತೆಂಗಿನಕಾಯಿ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಸಿಂಧನೂರಿನ ಮಹಾತ್ಮ ಗಾಂಧಿ ವೃತ್ತದಿಂದ ಪಾದಯಾತ್ರೆ ಆರಂಭವಾಗಿದ್ದು, ಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ಗೋಪೂಜೆ ನೆರವೇರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಉಸ್ತುವಾರಿಯಲ್ಲಿ ಇಂದಿನ ಪಾದಯಾತ್ರೆ ನಡೆಯುತ್ತಿದೆ. ಪಿಂಚಣಿ, ವೃದ್ಧಾಪ್ಯ ವೇತನ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅತಿಥಿ ಉಪನ್ಯಾಸಕರ ವೇತನ ಪಾವತಿ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಧ್ವನಿ ಎತ್ತಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಹಂಚಿನಾಳ ಕ್ಯಾಂಪ್ ಬಳಿ ಭೋಜನ ವಿರಾಮ ಆಯೋಜಿಸಲಾಗಿದೆ.
ಸಿಂಧನೂರು, ವಿಜಯನಗರ, ಗದಗ, ಕನಕಗಿರಿ, ಹಾವೇರಿ, ಹುಬ್ಬಳ್ಳಿ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ಇನ್ನು ಇಂದು ಕೂಡ ಬೃಹತ್ ಬಹಿರಂಗ ಸಭೆ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.