ಬೆಂಗಳೂರಿನ ಕುಂಬಳಗೋಡು ಪೊಲೀಸರು ಸುಮಾರು ₹1.70 ಕೋಟಿ ಮೌಲ್ಯದ 317 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಮಾದಕ ವಸ್ತು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿರುವ ಕುಂಬಳಗೋಡು ಪೊಲೀಸರು, ಸುಮಾರು ₹1.70 ಕೋಟಿ ಮೌಲ್ಯದ 317 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಚಾಂದ್ ಪಾಷ ಮತ್ತು ವಿಷ್ಣು ಎಂಬ ಇಬ್ಬರನ್ನು ಬಂಧಿಸಲಾಗಿದೆ.
ಕೇರಳ ಮತ್ತು ಒಡಿಶಾದಿಂದ ಬೆಂಗಳೂರಿಗೆ ಗಾಂಜಾ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನ ಸೀಟ್ಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಅಡಗಿಸಿಟ್ಟಿದ್ದ ಗಾಂಜಾ ಪತ್ತೆಯಾಗಿದೆ ಎಂದು ವರದಿಯಾಗಿದೆ.
ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣದ ಕುರಿತು ವಿಚಾರಣೆ ಮುಂದುವರಿಸಿದ್ದಾರೆ. ಮಾದಕ ವಸ್ತು ಸಾಗಾಟದ ಜಾಲದ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.