ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದ ಆರೋಪದ ಹಿನ್ನೆಲೆ ಟ್ಯಾಟೂ ಆರ್ಟಿಸ್ಟ್ ಅರ್ಜುನ್ ಮೇಲೆ ರಾಡ್ನಿಂದ ಹಲ್ಲೆ ನಡೆದಿದೆ.
ಕಳೆದ ಎರಡು ವರ್ಷಗಳ ಹಿಂದೆ ಟ್ಯಾಟೂ ಸ್ಟುಡಿಯೋದಲ್ಲಿ ಅರ್ಜುನ್ಗೆ ಸಂಪ್ರಿತಾ ಎಂಬ ಮಹಿಳೆಯ ಪರಿಚಯವಾಗಿತ್ತು ಎನ್ನಲಾಗಿದೆ. ಪರಿಚಯ ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದು, ಮದುವೆಯಾಗುವ ಮಾತುಕತೆ ನಡೆದಿತ್ತು ಎಂದು ಅರ್ಜುನ್ ಆರೋಪಿಸಿದ್ದಾರೆ.
ಸಂಪ್ರಿತಾಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಅರ್ಜುನ್ ಅವರಿಗೂ ಪತ್ನಿಯೊಂದಿಗೆ ವಿಚ್ಛೇದನವಾಗಿತ್ತು ಎನ್ನಲಾಗಿದೆ.
ಮದುವೆಯಾಗುವುದಾಗಿ ನಂಬಿದ್ದ ಅರ್ಜುನ್, ಸಂಪ್ರಿತಾಗೆ ಹಲವು ಬಾರಿ ಹಣ ನೀಡಿದ್ದರು ಎಂದು ಆರೋಪಿಸಲಾಗಿದೆ. ಆದರೆ ಕಳೆದ ಒಂದು ವರ್ಷದಿಂದ ಮದುವೆಯನ್ನು ಮುಂದೂಡುತ್ತಿದ್ದರು ಎನ್ನಲಾಗಿದೆ.
ಇತ್ತೀಚೆಗೆ ಸಂಪ್ರಿತಾಗೆ ಕರೆ ಮಾಡಿದಾಗ ಫೋನ್ ಸ್ವೀಕರಿಸದ ಹಿನ್ನೆಲೆಯಲ್ಲಿ ಅರ್ಜುನ್ ಅವರ ಮನೆ ಬಳಿ ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಸಂಪ್ರಿತಾ ಮತ್ತೊಬ್ಬ ವ್ಯಕ್ತಿಯೊಂದಿಗೆ ವಿಡಿಯೋ ಕಾಲ್ನಲ್ಲಿ ಮಾತನಾಡುತ್ತಿದ್ದುದನ್ನು ಪ್ರಶ್ನಿಸಿದಾಗ ಇಬ್ಬರ ನಡುವೆ ಜಗಳ ನಡೆದಿದೆ ಎಂದು ಹೇಳಲಾಗಿದೆ.
ಜಗಳದ ವೇಳೆ ಕಬ್ಬಿಣದ ರಾಡ್ನಿಂದ ಅರ್ಜುನ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಅರ್ಜುನ್ ಬಳಿಕ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಮತ್ತೊಂದೆಡೆ, ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅರ್ಜುನ್ ಅಪಘಾತವಾಗಿದೆ ಎಂದು ವಿಡಿಯೋ ಮಾಡಿದ್ದರು. ಪ್ರಕರಣದ ನಿಜಾಂಶ ಬಹಿರಂಗವಾಗದಂತೆ ಹಾಗೂ ಮರ್ಯಾದೆಗೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ಅಪಘಾತ ಎಂದು ಹೇಳಿದ್ದಾಗಿ ತಿಳಿದುಬಂದಿದೆ.
ಅರ್ಜುನ್ ಸಾಮಾಜಿಕ ಜಾಲತಾಣದಲ್ಲಿ ಒಂದು ಮಿಲಿಯನ್ಗೂ ಅಧಿಕ ಫಾಲೋವರ್ಸ್ ಹೊಂದಿದ್ದು, ಇತ್ತೀಚೆಗೆ ಸಿನಿಮಾಗಳಲ್ಲೂ ನಟಿಸಲು ಅವಕಾಶ ಪಡೆದಿದ್ದರು ಎನ್ನಲಾಗಿದೆ.
ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳ ಕುರಿತು ಬ್ಯಾಡರಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.