ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. 

ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಲು ಹೋಗಿ ಟಿಟಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಮೃತಪಟ್ಟಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ.


ನಿನ್ನೆ ಮಧ್ಯರಾತ್ರಿ ದೇವಸ್ಥಾನದ ಬಳಿಯ ರಿಂಗ್ ರಸ್ತೆಯಲ್ಲಿ ಕೆಲವರು ವ್ಹೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಲು ಹೋಗಿದ ಟಿಟಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.


ಅಪಘಾತದ ಪರಿಣಾಮ ಮನೋಜ್ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಸೇರಿದಂತೆ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ಮನೋಜ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.