Chikkaballapura ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
Chikkaballapura ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ದಾರುಣವಾಗಿ ಮೃತಪಟ್ಟಿದ್ದಾರೆ.
ಶಿಡ್ಲಘಟ್ಟ–ಚಿಂತಾಮಣಿ ಮಾರ್ಗದ ಕೊತ್ತನೂರು ಗೇಟ್ ಸಮೀಪ ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನ ನಡುವೆ ಅಪಘಾತ ಸಂಭವಿಸಿದೆ.
ಮೃತರನ್ನು ಚಿಂತಾಮಣಿ ತಾಲೂಕಿನ ಮಲ್ಲಿಕಾರ್ಜುನಪುರ ಗ್ರಾಮದ ರೂಪಾ (30), ರತ್ನಮ್ಮ (45) ಹಾಗೂ ಮುನಿಚೆನ್ನಮ್ಮ (40) ಎಂದು ಗುರುತಿಸಲಾಗಿದೆ.
ಮಲ್ಲಿಕಾರ್ಜುನಪುರ ಗ್ರಾಮದಿಂದ ಹುಜುಗೂರು ಗ್ರಾಮಕ್ಕೆ ಹೂ ಕಟಾವು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಓಮ್ನಿ ಕಾರಿನಲ್ಲಿ ಸುಮಾರು 10 ಮಂದಿ ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಹೂ ಕಟಾವು ಕೆಲಸಕ್ಕಾಗಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ರಾಮಚಂದ್ರಪ್ಪ ಎಂಬವರಿಗೆ ಸೇರಿದ ಕಾರಿಗೆ ಅಪಘಾತ ಸಂಭವಿಸಿದ್ದು, ಕಾರಿನ ಚಾಲಕ ಮನೋಜ್ ಸೇರಿದಂತೆ ಹಲವರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಚಾಲಕ ಮನೋಜ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನು ಕೆಲ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.