Chikkamagaluru ಜಿಲ್ಲೆಯ ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

Chikkamagaluru ಜಿಲ್ಲೆಯ ಕಡೂರು ತಾಲೂಕಿನ ಹಳೇಹಟ್ಟಿ ಗೇಟ್ ಬಳಿ ಈ ದುರ್ಘಟನೆ ನಡೆದಿದೆ.

ಕಡೂರಿನಿಂದ ಚಿಕ್ಕಮಗಳೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಮತ್ತೊಂದು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಬೈಕ್ ಸವಾರರು ರಸ್ತೆಯ ಮೇಲೆ ಬಿದ್ದಿದ್ದಾರೆ.

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಸರ್ಕಾರಿ ಬಸ್ ರಸ್ತೆಗೆ ಬಿದ್ದಿದ್ದ ಸವಾರರ ಮೇಲೆಯೇ ಹರಿದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಮೃತರು ಮೂಲತಃ ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದ್ದು, ಅವರ ಹೆಸರು ಹಾಗೂ ನಿಖರ ವಿಳಾಸ ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಮೃತರ ಗುರುತು ಪತ್ತೆಹಚ್ಚಲು ಮಾಹಿತಿ ಕಲೆಹಾಕುತ್ತಿದ್ದಾರೆ.

ಇನ್ನು ಮತ್ತೊಂದು ಬೈಕ್‌ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಖರಾಯಪಟ್ಟಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.