ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಗುಣವತಿ (36) ಮೃತಪಟ್ಟಿದ್ದಾರೆ.
ದಾವಣಗೆರೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುಣವತಿ (36) ಎಂದು ಗುರುತಿಸಲಾಗಿದೆ.
ಒಂದು ದಿನದ ಹಿಂದೆಯಷ್ಟೇ ಗುಣವತಿ ನ್ಯಾಮತಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ವೈದ್ಯರು ಪರೀಕ್ಷಿಸುವ ವೇಳೆಗೆ ಗುಣವತಿ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.