ಬೀದರ್ ಜಿಲ್ಲೆಯ ಹುಮ್ನಾಬಾದ್ ಪೊಲೀಸ್ ಠಾಣೆ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಆರು ಕಾರುಗಳು ಸುಟ್ಟುಹೋಗಿವೆ.

ಬೀದರ್: ದೀಪಾವಳಿ ಸಂಭ್ರಮದ ನಡುವೆ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿ ಪೊಲೀಸ್ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಆರು ಕಾರುಗಳು ಸುಟ್ಟುಹೋಗಿರುವ ಘಟನೆ ಹುಮ್ನಾಬಾದ್‌ನಲ್ಲಿ ನಡೆದಿದೆ.

ಹುಮ್ನಾಬಾದ್ ಪೊಲೀಸ್ ಠಾಣೆ ಆವರಣದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಆರು ಕಾರುಗಳನ್ನು ಜಪ್ತಿ ಮಾಡಿ ನಿಲ್ಲಿಸಲಾಗಿತ್ತು. ದೀಪಾವಳಿ ಸಂದರ್ಭದಲ್ಲಿ ಸಿಡಿಸಿದ ಪಟಾಕಿಯ ಕಿಡಿ ಕಾರುಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ ಅಷ್ಟರಲ್ಲಾಗಲೇ ಆರು ಕಾರುಗಳು ಬಹುತೇಕ ಸುಟ್ಟುಹೋಗಿದ್ದವು.

ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.