ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, 9 ಮಂದಿ ಸಜೀವ ದಹನವಾಗಿದ್ದಾರೆ. 40ರಿಂದ 50 ಪ್ರಯಾಣಿಕರು ಬಸ್ನಲ್ಲಿದ್ದರು.
ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಏಕಾಏಕಿ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇನಲ್ಲಿ ನಡೆದಿದೆ.
ಘಟನೆ ವೇಳೆ ಬಸ್ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಬೆಂಕಿ ವೇಗವಾಗಿ ಬಸ್ನ್ನು ಆವರಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಪ್ರಯಾಣಿಕರು ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್ನಿಂದಲೇ ಹೊರಕ್ಕೆ ಜಿಗಿದಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬಸ್ನಲ್ಲಿ ಕೂಲ್ಡೌನ್ ಕಾರ್ಯಾಚರಣೆ ನಡೆಯುತ್ತಿದ್ದು, ಅದು ಪೂರ್ಣಗೊಂಡ ಬಳಿಕ ಬಸ್ನೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಕೆಲವರು ಬಸ್ನೊಳಗೆ ಸಿಲುಕಿರುವ ಸಾಧ್ಯತೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ಪಡೆದುಕೊಂಡಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಅಗತ್ಯ ನೆರವು ಒದಗಿಸುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.