Hassan : ಹಳೇಬೀಡು ಸರ್ಕಾರಿ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಗೆ ಎರಡು ತಿಂಗಳಿಂದ ಮಾನಸಿಕ ಕಿರುಕುಳ ಹಾಗೂ ಕೆಲಸದಿಂದ ವಜಾಗೊಳಿಸುವ ಬೆದರಿಕೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ..
ಹಳೇಬೀಡು ಸರ್ಕಾರಿ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶೈಲಜಾ ಅವರು ಸತತವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಹಾಗೂ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಆಸ್ಪತ್ರೆಯ ವಾಟ್ಸ್ಆ್ಯಪ್ ಗ್ರೂಪ್ಗೆ ತಪ್ಪಾಗಿ ಆಡಿಯೋ ಸಂದೇಶ ಕಳುಹಿಸಿದ ಘಟನೆಗೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿಂದ ಮಾನಸಿಕ ಒತ್ತಡ ನೀಡಲಾಗುತ್ತಿದೆ ಎಂದು ಆಶಾ ಕಾರ್ಯಕರ್ತೆ ಆರೋಪಿಸಿದ್ದಾರೆ.
ಇದಲ್ಲದೆ, ಆಸ್ಪತ್ರೆಯ ಆವರಣದಲ್ಲಿ ಕೂಗಾಟ ಹಾಗೂ ಗಲಾಟೆಯಿಂದ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ತೊಂದರೆಯಾಗುತ್ತಿದೆ ಎಂಬ ಆಕ್ಷೇಪವೂ ವ್ಯಕ್ತವಾಗಿದೆ.
ಈ ಆರೋಪಗಳ ಕುರಿತು ಆರೋಗ್ಯ ಇಲಾಖೆಯ ಮೇಲಧಿಕಾರಿಗಳು ಹಾಗೂ ಆಸ್ಪತ್ರೆಯ ಆಡಳಿತಾಧಿಕಾರಿಗಳು ಏಕೆ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.