ಹಾಸನ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ.

ಮೃತ ಯುವತಿಯನ್ನು ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ (23) ಎಂದು ಗುರುತಿಸಲಾಗಿದೆ. ಶುಕ್ರವಾರ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ವರ್ಷ ಪ್ರವಾಸಕ್ಕೆಂದು ಸಕಲೇಶಪುರಕ್ಕೆ ಬಂದಿದ್ದಳು.

ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ಬಳಿಕ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ಒಂದೇ ಕೊಠಡಿಯಲ್ಲಿ ತಂಗಿದ್ದರು.


ಮಂಗಳವಾರ ಲಾಡ್ಜ್‌ನಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷ ಮೃತಪಟ್ಟಿದ್ದಾಳೆ. ಕೂಡಲೇ ರಘು ಹಾಗೂ ದರ್ಶನ್ ಆಕೆಯನ್ನು ಸಕಲೇಶಪುರ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ಯುವತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಯುವತಿ ಸಾವಿನ ಕುರಿತು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.