ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಳಿದು ಸುಪ್ರೀತ್ (35) ಮೃತಪಟ್ಟಿದ್ದಾರೆ.

Hassan :  ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಳಿದು 35 ವರ್ಷದ ಯುವಕನೊಬ್ಬರು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸುಪ್ರೀತ್ ಎಂದು ಗುರುತಿಸಲಾಗಿದೆ. ಮನೆಯ ಹಿಂಭಾಗದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು ಎನ್ನಲಾಗಿದೆ. ಜಾನುವಾರುಗಳನ್ನು ಹಿಡಿದುಕೊಂಡು ಜಮೀನಿನತ್ತ ತೆರಳುತ್ತಿದ್ದ ವೇಳೆ ಸುಪ್ರೀತ್ ಅವರಿಗೆ ತಂತಿ ಕಾಣಿಸದೆ ವಿದ್ಯುತ್ ಸಂಪರ್ಕಕ್ಕೆ ಒಳಗಾಗಿದ್ದಾರೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು, ಸುಮಾರು ಹತ್ತು ವರ್ಷಗಳ ಹಿಂದೆ ಸುಪ್ರೀತ್ ಅವರ ತಂದೆ ರಂಗಸ್ವಾಮಿ ಕಾಡಾನೆ ದಾಳಿಯಲ್ಲಿ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ.