ಹಾಸನಾಂಬಾ ಜಾತ್ರಾ ಮಹೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. 

Hassan : ಈ ಬಾರಿಯ ಹಾಸನಾಂಬಾ ಜಾತ್ರಾ ಮಹೋತ್ಸವ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. ಶ್ರದ್ಧಾ, ಭಕ್ತಿ ಮತ್ತು ಸಡಗರದಿಂದ ಜಾತ್ರಾ ಮಹೋತ್ಸವ ನಡೆಸಲು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ.


ಅಕ್ಟೋಬರ್ 29ರಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಅಂದು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಬಳಿಕ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ 12 ದಿನ ಭಕ್ತರಿಗೆ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ನವೆಂಬರ್ 11ರಂದು ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.


ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26ರಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಪೋಸ್ಟರ್ ಬಿಡುಗಡೆ ಹಾಗೂ ವೆಬ್‌ಸೈಟ್ ಲಾಂಚ್ ಮಾಡಲಿದ್ದಾರೆ.


ಈ ಬಾರಿ ಹಾಸನ ಜಿಲ್ಲೆಯ ಏಳು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಅದ್ದೂರಿತನಕ್ಕೆ ಹೆಚ್ಚಿನ ಒತ್ತು ನೀಡದೆ, ಶ್ರದ್ಧಾ-ಭಕ್ತಿ ಹಾಗೂ ಸಡಗರದಿಂದ ಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಹಾರ ಮೇಳ, ಚಿತ್ರಸಂತೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಯುತ್ತಿದೆ.