ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ತಿರುಮಲದಲ್ಲಿ ಭಾರೀ ಮಳೆಯಾಗುತ್ತಿದೆ. ರಸ್ತೆಗಳು ಜಲಾವೃತಗೊಂಡಿದ್ದು, ದಟ್ಟ ಮಂಜಿನಿಂದ ವಾಹನ ಸಂಚಾರಕ್ಕೂ ತೊಂದರೆಯಾಗುತ್ತಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ತಿರುಮಲ ಬೆಟ್ಟದಲ್ಲಿ ನಿರಂತರ ಮಳೆಯಾಗುತ್ತಿದೆ. ಭಾರೀ ಮಳೆ ಮತ್ತು ದಟ್ಟ ಮಂಜಿನಿಂದಾಗಿ ತಿಮ್ಮಪ್ಪನ ದರ್ಶನಕ್ಕೆ ಆಗಮಿಸಿರುವ ಭಕ್ತರು ತೊಂದರೆ ಎದುರಿಸುತ್ತಿದ್ದಾರೆ.
ತಿರುಮಲದ ಪ್ರಮುಖ ರಸ್ತೆಗಳು ಹಾಗೂ ಕೆಲವು ಪ್ರದೇಶಗಳಲ್ಲಿ ನೀರು ನಿಂತಿರುವುದರಿಂದ ಭಕ್ತರ ಸಂಚಾರಕ್ಕೆ ಅಡಚಣೆಯಾಗಿದೆ. ದರ್ಶನ ಮುಗಿಸಿ ವಸತಿ ಕೊಠಡಿಗಳು ಮತ್ತು ಲಡ್ಡು ವಿತರಣಾ ಕೇಂದ್ರಗಳಿಗೆ ತೆರಳುವವರಿಗೂ ಸಮಸ್ಯೆಯಾಗುತ್ತಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಕೆಲವರು ಶೆಡ್ಗಳ ಕೆಳಗೆ ಆಶ್ರಯ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಇನ್ನು, ಮಳೆ ಮತ್ತು ಮಂಜಿನಿಂದಾಗಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರದ ವೇಳೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಗೋಚರತೆ ಕಡಿಮೆಯಾಗುವ ಸಾಧ್ಯತೆಯಿರುವುದರಿಂದ ವಾಹನಗಳನ್ನು ನಿಧಾನವಾಗಿ ಚಲಾಯಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅಗತ್ಯ.
ತಿರುಮಲಕ್ಕೆ ತೆರಳುವ ಭಕ್ತರು ಪ್ರಯಾಣ ಆರಂಭಿಸುವ ಮೊದಲು ಹವಾಮಾನ ಮುನ್ಸೂಚನೆ, ದರ್ಶನದ ವ್ಯವಸ್ಥೆ ಹಾಗೂ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಯ ಅಧಿಕೃತ ಸೂಚನೆಗಳನ್ನು ಪರಿಶೀಲಿಸುವುದು ಸೂಕ್ತ.