Karnataka Weather : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನ ಹಲವೆಡೆ ಭಾರಿ ಮಳೆ ದಾಖಲಾಗಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Karnataka Weather : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಸುರಿದ ಮಳೆಯಿಂದಾಗಿ ಹಲವು ಕಡೆ ವಾಹನ ಸವಾರರು ಪರದಾಡುವಂತಾಯಿತು.
ಬೆಂಗಳೂರು ನಗರದ ರಿಚ್ಮಂಡ್ ಟೌನ್, ಶಾಂತಿನಗರ, ಎಂ.ಜಿ. ರಸ್ತೆ, ಸರ್ಜಾಪುರ, ಕೆ.ಆರ್. ಮಾರುಕಟ್ಟೆ ಹಾಗೂ ಕಾರ್ಪೊರೇಷನ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಸಂಜೆ ಬಳಿಕ ಹಾಗೂ ಬೆಳಗಿನ ಜಾವ ಮಳೆಯಾಗುತ್ತಿದ್ದು, ಇಂದು ಸಂಜೆ ವೇಳೆಯೇ ಮಳೆ ಆರಂಭವಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಉತ್ತಮ ಮಳೆಯ ನಿರೀಕ್ಷೆಯಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.