ಕೊಪ್ಪಳದ ಗಂಗಾವತಿ ಬಸ್ ನಿಲ್ದಾಣದಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊಪ್ಪಳ: ಗಂಗಾವತಿ ಬಸ್ ನಿಲ್ದಾಣದಲ್ಲಿ ಯುವತಿಯರ ಫೋಟೋ ತೆಗೆಯುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ನಿವಾಸಿಯಾಗಿರುವ ವ್ಯಕ್ತಿಯೊಬ್ಬ ಗಂಗಾವತಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಮೂಲಕ ಯುವತಿಯರ ಫೋಟೋ ತೆಗೆಯುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಕೆಲವು ಮಹಿಳೆಯರು ಆತನನ್ನು ಪ್ರಶ್ನಿಸಿದ್ದಾರೆ.
ಬಳಿಕ ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ವ್ಯಕ್ತಿಯ ಮೊಬೈಲ್ ಪರಿಶೀಲಿಸಿದಾಗ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರ ಫೋಟೋಗಳು ಪತ್ತೆಯಾಗಿವೆ ಎನ್ನಲಾಗಿದೆ.
ಅಲ್ಲದೆ, ಮೊಬೈಲ್ನಲ್ಲಿ ಅಶ್ಲೀಲ ಚಿತ್ರಗಳೂ ಪತ್ತೆಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ವ್ಯಕ್ತಿಯನ್ನು ತೀವ್ರವಾಗಿ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕಾನೂನುಬದ್ಧವಾಗಿ ಯಾವುದೇ ಪ್ರಕರಣ ದಾಖಲಾಗಿದೆಯೇ ಅಥವಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆಯೇ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.