ಕೊಪ್ಪಳ ಜಿಲ್ಲೆಯ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಸೀಗೆ ಹುಣ್ಣಿಮೆ ಪ್ರಯುಕ್ತ ಭಕ್ತರ ಮಹಾಪೂರ ಹರಿದುಬಂದಿದೆ.
ಕೊಪ್ಪಳ ತಾಲೂಕಿನ ಐತಿಹಾಸಿಕ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಸ್ಥಾನದಲ್ಲಿ ಸೀಗೆ ಹುಣ್ಣಿಮೆ ಪ್ರಯುಕ್ತ ಭಕ್ತರ ಮಹಾಪೂರವೇ ಹರಿದುಬಂದಿದೆ. ತಾಯಿ ಹುಲಿಗೆಮ್ಮನ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಸೂರ್ಯೋದಯಕ್ಕೂ ಮುನ್ನವೇ ದೇವಸ್ಥಾನದ ಆವರಣದಲ್ಲಿ ಭಕ್ತರು ಜಮಾಯಿಸಿದ್ದು, ದರ್ಶನಕ್ಕಾಗಿ ಉದ್ದನೆಯ ಸಾಲಿನಲ್ಲಿ ಕಾಯುತ್ತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕೆಲವರು ಬ್ಯಾರಿಕೇಡ್ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದ ಘಟನೆಯೂ ನಡೆದಿದೆ.
ಹಬ್ಬದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದ್ದು, ಸುಗಮ ದರ್ಶನ ಮತ್ತು ಜನಸಂದಣಿ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದೆ. ಭಕ್ತರು ತಾಳ್ಮೆಯಿಂದ ಸರದಿ ಸಾಲಿನಲ್ಲಿ ನಿಂತು, ಸಿಬ್ಬಂದಿಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.