ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಲ್ಕತ್ತಾದಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಬೆಂಗಳೂರು : ಕೊಲ್ಕತ್ತಾದಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬೆಂಗಳೂರಿನ ಬೃಂದಾವನ ಅಪಾರ್ಟ್‌ಮೆಂಟ್ ನಿವಾಸಿ ಗಣೇಶ್ ಸುಬ್ಬಣ್ಣ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.

ವಿಮಾನದಿಂದ ಇಳಿದು ಲಾಂಜ್ ಬಳಿ ಬರುತ್ತಿದ್ದ ವೇಳೆ ಗಣೇಶ್ ಸುಬ್ಬಣ್ಣ ಅವರಿಗೆ ಏಕಾಏಕಿ ಅಸ್ವಸ್ಥತೆ ಕಾಣಿಸಿಕೊಂಡಿದ್ದು, ಅಲ್ಲಿಯೇ ಕುಸಿದು ಬಿದ್ದಿದ್ದಾರೆ.


ಕೂಡಲೇ ಏರ್‌ಪೋರ್ಟ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೃದಯಾಘಾತದಿಂದ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

ಇನ್ನು, ಕಳೆದ ಎರಡು ತಿಂಗಳ ಅವಧಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ನಾಲ್ವರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.