ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಚಿಕನ್ ಪೀಸ್ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದ್ಯೋಗಿಯೇ ಸೀತಾರಾಮ್ ಎಂಬಾತನ ಎದೆಗೆ ಚೂರಿಯಿಂದ ಇರಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 

Mudalagi : ಚಿಕನ್ ಪೀಸ್ ತಿನ್ನುವ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳವೊಂದು ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸೀತಾರಾಮ್ ಎಂದು ಗುರುತಿಸಲಾಗಿದ್ದು, ಆರೋಪಿ ಅರುಣ್‌ಕುಮಾರ್ ಎಂದು ತಿಳಿದುಬಂದಿದೆ. ಇಬ್ಬರೂ ಉತ್ತರ ಪ್ರದೇಶದ ನಿವಾಸಿಗಳಾಗಿದ್ದು, ಮೂಡಲಗಿ ಪಟ್ಟಣದ ಸ್ಟೀಲ್ ಕಂಪನಿಯೊಂದರಲ್ಲಿ ಸಹೋದ್ಯೋಗಿಗಳಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.


ಆಗಸ್ಟ್ 30ರ ರಾತ್ರಿ ಇಬ್ಬರೂ ಸೇರಿ ಚಿಕನ್ ಪಾರ್ಟಿ ಮಾಡುತ್ತಿದ್ದ ವೇಳೆ, ಹೆಚ್ಚು ಚಿಕನ್ ಪೀಸ್ ಬೇಕು ಎಂಬ ವಿಚಾರಕ್ಕೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಗಲಾಟೆ ತಾರಕಕ್ಕೇರಿದ್ದು, ಆರೋಪಿ ಅರುಣ್‌ಕುಮಾರ್ ಚಾಕುವಿನಿಂದ ಸೀತಾರಾಮ್ ಅವರ ಎದೆಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.


ಗಂಭೀರವಾಗಿ ಗಾಯಗೊಂಡ ಸೀತಾರಾಮ್ ಅವರನ್ನು ಕೂಡಲೇ ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಆರೋಪಿ ಮುಂದಾಗಿದ್ದ ಎನ್ನಲಾಗಿದೆ. ಇದೇ ವೇಳೆ ಸೀತಾರಾಮ್ ಕಟ್ಟಡದ ಮೇಲಿಂದ ಬಿದ್ದು ಗಾಯಗೊಂಡಿದ್ದಾರೆ ಎಂದು ಬಿಂಬಿಸಲು ಆರೋಪಿ ಪ್ರಯತ್ನಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.


ಘಟನೆ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಘಟಪ್ರಭಾ ಠಾಣೆ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೀತಾರಾಮ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಒಂದು ಸಣ್ಣ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವುದು ಗ್ರಾಮಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.