Mysuru  ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ಯುವಕನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಆರೋಪ ಕೇಳಿಬಂದಿದೆ. 

Mysuru  : ಯುವಕನೊಬ್ಬನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಲಕ್ಕನಕೊಪ್ಪಲು ಗ್ರಾಮದಲ್ಲಿ ಕೇಳಿಬಂದಿದೆ.

ಮೃತರನ್ನು 34 ವರ್ಷದ ಸಿಂಧೂ ಎಂದು ಗುರುತಿಸಲಾಗಿದೆ. ಇವರು ಶ್ರೀಕಾಂತ್ ಎಂಬುವವರ ಪತ್ನಿಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಸಿಂಧೂ ಕ್ರಿಮಿನಾಶಕ ಮಾತ್ರೆ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಸಾವಿಗೂ ಮುನ್ನ ಸಿಂಧೂ ನೀಡಿರುವ ಹೇಳಿಕೆಯಲ್ಲಿ ವಿಕಾಸ್ ಎಂಬಾತನೇ ತಮ್ಮ ಸಾವಿಗೆ ಕಾರಣ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಸಿಂಧೂ ಅವರ ಮೊಬೈಲ್ ಪರಿಶೀಲಿಸಿದಾಗ ವಿಕಾಸ್ ಜೊತೆ ನಿರಂತರ ವಾಟ್ಸಪ್ ಸಂದೇಶಗಳು ಹಾಗೂ ವಿಡಿಯೋ ಕಾಲ್‌ಗಳು ನಡೆದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ಲ್ಯಾಕ್‌ಮೇಲ್ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಎಲ್.ಕೆ. ವಿಕಾಸ್, ಅವರ ತಂದೆ ಕುಮಾರ ಹಾಗೂ ತಾಯಿ ವಸಂತ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.