ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರೆ ವೇಳೆ ಘರ್ಷಣೆ ಮತ್ತು ಕಲ್ಲು ತೂರಾಟ ನಡೆದಿದೆ. 

ಸಿದ್ದೇಶ್ವರ ಸ್ವಾಮಿ ಜಾತ್ರೆಯ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಕಲ್ಲು ತೂರಾಟ ನಡೆದಿರುವ ಘಟನೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಜಾತ್ರೆಯ ಮೆರವಣಿಗೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ ಆರಂಭವಾಗಿದೆ ಎನ್ನಲಾಗಿದೆ. ಬಳಿಕ ಎರಡೂ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಆನಂದ್, ಭರತ್, ಅಭಿ ಹಾಗೂ ಮಗು ಗಾಯಗೊಂಡಿದ್ದು, ಗಾಯಾಳುಗಳಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘರ್ಷಣೆಯ ಹಿನ್ನೆಲೆಯಲ್ಲಿ ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿ ರಥೋತ್ಸವವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದೆ.

ಮೆರವಣಿಗೆ ವೇಳೆ ಸೂಕ್ತ ಪೊಲೀಸ್ ಭದ್ರತೆ ಇರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದು, ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.