ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸರ್ವೀಸ್ ರಸ್ತೆಯಲ್ಲಿ ಸ್ಕೂಟಿ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ..

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ.


ದಾರಾಪುರ ಗ್ರಾಮದ ನಿವಾಸಿ 21 ವರ್ಷದ ನಿತಿನ್ ಮೃತ ಯುವಕ. ಅಪಘಾತದಲ್ಲಿ ಸ್ಕೂಟಿಯ ಹಿಂಬದಿ ಸವಾರ ಸೇವಂತ್ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ನಿತಿನ್ ಹಾಗೂ ಸೇವಂತ್ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕೆಂಪನಹಳ್ಳಿ ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಎದುರಿನಿಂದ ಬಂದ ಲಾರಿ ಸ್ಕೂಟಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ನಿತಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.