ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಎ14 ಆರೋಪಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು 59ನೇ ಸಿಸಿಹೆಚ್ ಕೋರ್ಟ್ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ಇನ್ನೂ ಆದೇಶ ಹೊರಬಾರದ ಹಿನ್ನೆಲೆಯಲ್ಲಿ ವಿಚಾರಣೆಗೆ ಹೆಚ್ಚಿನ ಸಮಯ ನೀಡುವಂತೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನಕುಮಾರ್ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡುವಂತೆ ಎಸ್ಪಿಪಿ ಪ್ರಸನ್ನಕುಮಾರ್ ಮನವಿ ಸಲ್ಲಿಸಿದರು. ಎಸ್ಪಿಪಿ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಜೈಲು ಅಧಿಕಾರಿಗಳಿಂದ ಪ್ರದೋಷ್ ನ್ಯಾಯಾಲಯಕ್ಕೆ ಹಾಜರು
ಇಂದು ಎ14 ಆರೋಪಿ ಪ್ರದೋಷ್ ಅವರನ್ನು ಜೈಲು ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯಕ್ಕೆ ಆಗಮಿಸಿದ ಪ್ರದೋಷ್, ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಸಹಿ ಮಾಡಿ ಹೊರಬಂದರು.
ಆದರೆ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರದೋಷ್ ಅವರನ್ನು ಮತ್ತೆ ಜೈಲಿಗೆ ಕರೆದೊಯ್ದಿದ್ದಾರೆ.
ಸೋಮವಾರ ನಡೆಯಲಿದೆ ಮುಂದಿನ ಪ್ರಕ್ರಿಯೆ
ಹೈಕೋರ್ಟ್ ಆದೇಶಕ್ಕಾಗಿ ಕಾಯುತ್ತಿರುವ ಹಿನ್ನೆಲೆಯಲ್ಲಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಮುಂದೂಡಿಕೆಯಾಗಿದ್ದು, ಸೋಮವಾರ ನ್ಯಾಯಾಲಯದಲ್ಲಿ ಮುಂದಿನ ವಿಚಾರಣೆ ನಡೆಯಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಂದುವರಿದಿರುವ ಬೆನ್ನಲ್ಲೇ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗುವ ನಿರೀಕ್ಷೆ ಮೂಡಿಸಿದೆ.