ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ.
ಅಪಘಾತದಲ್ಲಿ ದಿನೇಶ್ (38) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಗಾಯಗೊಂಡಿದ್ದು, ಅವರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ಪ್ರಕಾರ, ಐಸಿಐಸಿಐ ಬ್ಯಾಂಕ್ಗೆ ಸೇರಿದ ಬೊಲೆರೋ ಪಿಕಪ್ ವಾಹನವು ಎಟಿಎಂಗಳಿಗೆ ಹಣ ತುಂಬಲು ತೆರಳುತ್ತಿತ್ತು. ಈ ವೇಳೆ ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.
ಗಾಯಗೊಂಡಿರುವವರು ಕೊಡಗು ಹಾಗೂ ಮಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.