ಅಪರಿಚಿತ ವಾಹನ ಡಿಕ್ಕಿ ಹೊಡೆದು ನವದಂಪತಿ ಮೃತಪಟ್ಟಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.
ಮೃತರನ್ನು ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದರ್ಶನ್ (25) ಹಾಗೂ ಉಷಾರಾಣಿ (21) ಎಂದು ಗುರುತಿಸಲಾಗಿದೆ. ದಂಪತಿ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಮಂಗಳವಾರ ದಂಪತಿ ಬೈಕ್ನಲ್ಲಿ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಉಷಾರಾಣಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಘಟನೆ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವಾಹನ ಹಾಗೂ ಚಾಲಕನ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.